ಢಾಕಾ: ಮಹತ್ವದ ಬೆಳವಣಿಗೆಯಲ್ಲಿ ಮಹಮದ್ ಯೂನಸ್ ನೇತೃತ್ವದ ಬಾಂಗ್ಲಾದೇಶ ಸರ್ಕಾರ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ದಶಕಗಳ ಹಳೆಯ ಪಕ್ಷ ಅವಾಮಿ ಲೀಗ್ ಪಕ್ಷವನ್ನು ನಿಷೇಧಿಸಿದೆ.
ಬಾಂಗ್ಲಾದೇಶದ ಮಧ್ಯಂತರ ಸರ್ಕಾರವು ಶನಿವಾರ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ರಾಜಕೀಯ ಪಕ್ಷವಾದ ಅವಾಮಿ ಲೀಗ್ ಅನ್ನು ನಿಷೇಧಿಸಿದ್ದು,ಕಳೆದ ವರ್ಷ ಅವರನ್ನು ಪದಚ್ಯುತಗೊಳಿಸಲು ಕಾರಣವಾದ ಸಾಮೂಹಿಕ ಪ್ರತಿಭಟನೆಗಳ ಮೇಲೆ ನಡೆಸಿದ ಕ್ರಮಗಳ ಕುರಿತಾದ ವಿಚಾರಣೆಯ ಫಲಿತಾಂಶ ಬರುವವರೆಗೂ ಆ ಪಕ್ಷವನ್ನು ನಿಷೇಧಿಸಿದೆ ಎನ್ನಲಾಗಿದೆ.
ಈ ಸಂಬಂಧ ಅಧಿಕೃತ ಗೆಜೆಟ್ ಅಧಿಸೂಚನೆಯನ್ನು ಶೀಘ್ರದಲ್ಲಿಯೇ ಹೊರಡಿಸಲಾಗುವುದು. ಪಕ್ಷವನ್ನು ನಿಷೇಧಿಸುವ ನಿರ್ಧಾರ ತೆಗೆದುಕೊಳ್ಳುವ ಮೊದಲು ಸರ್ಕಾರವು ವಿವಿಧ ರಾಜಕೀಯ ಪಕ್ಷಗಳೊಂದಿಗೆ ಸಂಪರ್ಕ ಸಾಧಿಸಿದೆ ಎಂದು ಯೂನಸ್ ಕಚೇರಿ ತಿಳಿಸಿದೆ.
‘ಭಯೋತ್ಪಾದಕ ಚಟುವಟಿಕೆಗಳು ಮತ್ತು ಸರ್ವಾಧಿಕಾರಿ ಆಡಳಿತ ನಡೆಸಿದ ಆರೋಪದ ಮೇರೆಗೆ ಅವಾಮಿ ಲೀಗ್ ಪಕ್ಷವನ್ನು ನಿಷೇಧಿಸಬೇಕು ಎಂದು ಆಗ್ರಹಿಸಿ ವಿದ್ಯಾರ್ಥಿಗಳ ನೇತೃತ್ವದಲ್ಲಿ ಹೊಸದಾಗಿ ರಚನೆಯಾದ ನ್ಯಾಷನಲ್ ಸಿಟಿಜನ್ ಪಾರ್ಟಿ (ಎನ್‌ಸಿಪಿ) ಕಾರ್ಯಕರ್ತರು ಗುರುವಾರ ಢಾಕಾದಾದ್ಯಂತ ಪ್ರತಿಭಟನೆ ನಡೆಸಿದ್ದರು. ಇದಾದ ಬಳಿಕ ಪಕ್ಷವನ್ನು ನಿಷೇಧಿಸುವ ಘೋಷಣೆ ಹೊರಬಿದ್ದಿದೆ.
ವಿಶ್ವಸಂಸ್ಥೆಯ ಪ್ರಕಾರ, ಜುಲೈ 2024ರಲ್ಲಿ ಬಾಂಗಾದೇಶದಲ್ಲಿ ರಾಜಕೀಯ ಸಂಘರ್ಷ ಭುಗಿಲೆದ್ದಾಗ ಹಸೀನಾ ಅವರ ಸರ್ಕಾರವು ವಿರೋಧ ಪಕ್ಷದ ನಾಯಕರನ್ನು ಮೌನಗೊಳಿಸಲು ಕಾರ್ಯಾಚರಣೆ ನಡೆಸಿತ್ತು. ಈ ವೇಳೆ 1,400 ಪ್ರತಿಭಟನಾಕಾರರು ಸಾವನ್ನಪ್ಪಿದ್ದರು. ಹಸೀನಾ ಭಾರತದಲ್ಲಿ ಸ್ವಯಂ-ದೇಶಭ್ರಷ್ಟರಾಗಿದ್ದಾರೆ ಮತ್ತು ಮಾನವೀಯತೆಯ ವಿರುದ್ಧದ ಅಪರಾಧಗಳ ಆರೋಪದ ಮೇಲೆ ಢಾಕಾದಿಂದ ಬಂಧನ ವಾರಂಟ್ ಅನ್ನು ಧಿಕ್ಕರಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ದೇಶದ ಭದ್ರತೆ ಮತ್ತು ಸಾರ್ವಭೌಮತ್ವವನ್ನು ರಕ್ಷಿಸುವ ಹಿತದೃಷ್ಟಿಯಿಂದ ಬಾಂಗ್ಲಾದೇಶದ ಅಂತರರಾಷ್ಟ್ರೀಯ ಅಪರಾಧ ನ್ಯಾಯಮಂಡಳಿಯಲ್ಲಿ ಅವಾಮಿ ಲೀಗ್ ಮತ್ತು ಅದರ ನಾಯಕರ ವಿಚಾರಣೆ ಪೂರ್ಣಗೊಳ್ಳುವವರೆಗೆ ನಿಷೇಧವು ಜಾರಿಯಲ್ಲಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಹಸೀನಾ ಅವರನ್ನು ಪ್ರಧಾನಿ ಹುದ್ದೆಯಿಂದ ಪದಚ್ಯುತಗೊಳಿಸಿದಾಗಿನಿಂದ ಬಾಂಗ್ಲಾದೇಶದ ಮಧ್ಯಂತರ ನಾಯಕ, ನೊಬೆಲ್ ಶಾಂತಿ ಪ್ರಶಸ್ತಿ ವಿಜೇತ ಮುಹಮ್ಮದ್ ಯೂನಸ್ ಮಧ್ಯಂತರ ಸರ್ಕಾರವನ್ನು ಮುನ್ನಡೆಸುತ್ತಿದ್ದಾರೆ.