ಬೆಂಗಳೂರು: ಕರಾವಳಿಯ ಬಹುತೇಕ ಕಡೆ, ದಕ್ಷಿಣ ಒಳನಾಡಿನ ಕೆಲವು ಕಡೆ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆ ಭಾನುವಾರವೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಕನ್ನಡ ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ರಾಜ್ಯದಾದ್ಯಂತ ಒಂದೆರಡು ಕಡೆ ಬಿರುಗಾಳಿ ಸಹಿತ ಗುಡುಗು ಕಾಣಿಸಿಕೊಳ್ಳುವ ಸಂಭವವಿದ್ದು, ಗಾಳಿಯ ವೇಗವು ಕರಾವಳಿಯಲ್ಲಿ ಗಂಟೆಗೆ 40–50 ಕಿ.ಮೀ. ಮತ್ತು ಒಳನಾಡಿನಲ್ಲಿ ಗಂಟೆಗೆ 30–40 ಕಿ.ಮೀ. ತಲುಪುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.
ಕರಾವಳಿಯಲ್ಲಿ ಬಿರುಗಾಳಿಯು 55 ಕಿ.ಮೀ. ವೇಗದಲ್ಲಿ ಬೀಸುವ ಸಾಧ್ಯತೆಯಿದೆ. ಆದ್ದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು. ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಕೆಲವೊಮ್ಮೆ ಬಲವಾದ ಬಿರುಗಾಳಿ ಬೀಸುವ ಸಾಧ್ಯತೆಯೂ ಇದೆ ಎಂದು ಹೇಳಿದೆ.
ಕರಾವಳಿಯಲ್ಲಿ ಮುಂದಿನ ಐದು ದಿನಗಳು ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ಸಾಧಾರಣ ಮಳೆ ಮುಂದುವರಿಯುವ ಸಂಭವವಿದೆ. ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು ಹಾಗೂ ತುಮಕೂರು ಜಿಲ್ಲೆಗೆ ಇದೇ ಸೋಮವಾರ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.