ಬೆಂಗಳೂರು : ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ಶಿಫಾರಸು ಮಾಡಲು ಕ್ಯಾಬಿನೆಟ್ ಒಪ್ಪಿಗೆ ಸೂಚಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿಂದು ನಡೆದ ಸಚಿವ ಸಂಪುಟ ಸಭೆಯಲ್ಲಿ, ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲು ಬ್ಯಾಲೆಟ್ ಪೇಪರ್ ಜಾರಿಗೆ ನಿಯಮಗಳನ್ನು ರೂಪಿಸಲು ಆಯೋಗಕ್ಕೆ ಸೂಕ್ತ ಶಿಫಾರಸ್ಸು ಮಾಡಲು ತೀರ್ಮಾನ ಕೈಗೊಂಡಿದೆ.
ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಸಚಿವ ಹೆಚ್‌ಕೆ ಪಾಟೀಲ್, ಸ್ಥಳಿಯ ಸಂಸ್ಥೆಗಳ ಚುನಾವಣೆಗೆ ಮತದಾರರ ಪಟ್ಟಿಯನ್ನು ತಯಾರಿಸಲು, ಪರಿಷ್ಕರಣೆ ಮಾಡಲು ಅಗತ್ಯ ಕಾನೂನು ಮಾಡಲು ನಿಯಮಾವಳಿ ರೂಪಿಸಲು ರಾಜ್ಯ ಚುನಾವಣಾ ಆಯೋಗಕ್ಕೆ ಶಿಫಾರಸ್ಸು ಮಾಡಲು ಸಂಪುಟ ಒಪ್ಪಿಗೆ ಸಿಕ್ಕಿದೆ. ಅನುಮೋದನೆ ಸಿಕ್ಕಿದೆ.
ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ಮಾಡಲು ಕಾಯ್ದೆಗೆ ತಿದ್ದುಪಡಿ ತರಬೇಕಿದ್ದು, ಸುಗ್ರೀವಾಜ್ಞೆ ಮೂಲಕ ಅಥವಾ ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ ಪಡೆಯಬೇಕಿದೆ. ಇಲ್ಲ ಸಚಿವ ಸಂಪುಟ ಶಿಫಾರಸ್ಸನ್ನ ಚುನಾವಣಾ ಆಯೋಗಕ್ಕೆ ಕಳುಹಿಸಬಹುದು. ಆಗ ಚುನಾವಣಾ ಆಯೋಗ ಒಪ್ಪಬಹುದು ಇಲ್ಲ ಬಿಡಬಹುದು. ಹಾಗಾಗಿ ಕಾಂಗ್ರೆಸ್ ಸರ್ಕಾರದ ಈ ಮಹತ್ವದ ನಿರ್ಧಾರ ಮುಂದಿನ ದಿನಗಳಲ್ಲಿ ರಾಜಕೀಯ ತಿರುವು ಪಡೆದುಕೊಳ್ಳುವ ಸಾಧ್ಯತೆ ಇದೆ.
ಗ್ರಾಮ ಪಂಚಾಯತ್ ಚುನಾವಣೆಗಳನ್ನ ಬಿಟ್ಟು ಉಳಿದ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಇವಿಎಂ ಬಳಕೆ ಮಾಡಲಾಗುತ್ತಿತ್ತು. ಆದರೆ ಬೀದರ್ ಜಿಲ್ಲೆಯಲ್ಲಿ ಮಾತ್ರ ಪ್ರಯೋಗಿಕವಾಗಿ ಗ್ರಾಮಪಂಚಾಯ್ತಿ ಚುನಾವಣೆಗೆ ಇವಿಎಂ ಬಳಕೆ ಮಾಡಲಾಗಿತ್ತು. ಈ ಹೊಸ ಕಾನೂನಿಗೆ ಒಪ್ಪಿಗೆ ಸಿಕ್ಕಿದ್ರೆ ಗ್ರೇಟರ್ ಬೆಂಗಳೂರು ಚುನಾವಣೆ ಸೇರಿದಂತೆ ಎಲ್ಲ ಮಹಾನಗರಪಾಲಿಕೆ, ನಗರಸಭೆ, ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಚುನಾವಣೆಗಳಿಗೂ ಬ್ಯಾಲೆಟ್ ಪೇಪರ್ ಮೂಲಕ ಮತದಾನ ಆಗಲಿದೆ.