ಚಾಮರಾಜನಗರ: ಇತ್ತೀಚೆಗೆ ನಡೆದ ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ ರಾಜ್ಯದಲ್ಲಿ ಹೊಸದಾಗಿ ಸ್ಥಾಪಿಸಲಾಗಿದ್ದ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ತೀರ್ಮಾನಿಸಲಾಗಿದೆ. ಇದರಿಂದ ಗಡಿನಾಡು ಚಾಮರಾಜನಗರ ವಿಶ್ವವಿದ್ಯಾಲಯದ ಭವಿಷ್ಯವೂ ಡೋಲಾಯಮಾನವಾಗಿದ್ದು ಉನ್ನತ ಶಿಕ್ಷಣದ ಕನಸು ಹೊತ್ತ ಆದಿವಾಸಿ ಬಡ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗಿದ್ದಾರೆ.
ರಾಜ್ಯದ ಉನ್ನತ ಶಿಕ್ಷಣ ನೋಂದಣಿ ಸರಾಸರಿ ಶೇಕಡಾ 36 ರಷ್ಟಿದ್ದರೆ ಚಾಮರಾಜನಗರ ಜಿಲ್ಲೆಯಲ್ಲಿ ಉನ್ನತ ಶಿಕ್ಷಣದ ನೋಂದಣಿ ಕೇವಲ ಶೇಕಡಾ 10.08 ಮಾತ್ರ ಇದ್ದು ಕಳವಳಕಾರಿಯಾಗಿದ್ದು ಶೈಕ್ಷಣಿಕವಾಗಿ ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿ ಹೊಂದಿದೆ. ಚಾಮರಾಜನಗರ ಜಿಲ್ಲೆಯ ಅಭಿವೃದ್ಧಿ ಸೂಚ್ಯಂಕದಲ್ಲೂ ಇದು ಪ್ರಸ್ತಾಪವಾಗಿದೆ. ಜಿಲ್ಲೆಯಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳು ಇಲ್ಲದಿರುವುದು ಇದಕ್ಕೆ ಪ್ರಮುಖ ಕಾರಣವಾಗಿದೆ.
ಜಿಲ್ಲೆಯಾದ ಎಷ್ಟೋ ವರ್ಷಗಳ ನಂತರ ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಹಾಗೂ ಸರ್ಕಾರಿ ಮೆಡಿಕಲ್ ಕಾಲೇಜುಗಳು ತಲೆ ಎತ್ತಿವೆ. ಶೈಕ್ಷಣಿಕವಾಗಿ ಹಿಂದುಳಿದ ಜಿಲ್ಲೆ ಎಂಬ ಅಪಖ್ಯಾತಿ ಹೊಂದಿದ್ದ ಚಾಮರಾಜನಗರ ಜಿಲ್ಲೆಯಲ್ಲಿ ಪ್ರಾದೇಶಿಕ ಅಸಮತೋಲನ ನಿವಾರಿಸುವ ನಿಟ್ಟಿನಲ್ಲಿ ಹಿಂದಿನ ಬಿಜೆಪಿ ಸರ್ಕಾರ 2023 ರಲ್ಲಿ ಚಾಮರಾಜನಗರ ವಿಶ್ವ ವಿದ್ಯಾಲಯ ಸ್ಥಾಪಿಸಿತ್ತು. ಆ ಮೂಲಕ ಜಿಲ್ಲೆಯ ಹಿಂದುಳಿದ, ದಲಿತ ಹಾಗು ಕಾಡಂಚಿನ ಮಕ್ಕಳು ಉನ್ನತ ಶಿಕ್ಷಣ ಪಡೆಯಲು ಪೂರಕ ವಾತಾವರಣ ಸೃಷ್ಟಿಯಾಗಿತ್ತು.