ಹೈದರಾಬಾದ್:ತೆಲಂಗಾಣದ ನಾಗರ್ ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ ನಿರ್ಮಾಣ ಹಂತದಲ್ಲಿದ್ದ ಸುರಂಗದಲ್ಲಿ ಮೇಲ್ಛಾವಣಿ ಕುಸಿದು ಕನಿಷ್ಠ 8 ಮಂದಿ ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಘಟನೆಯಲ್ಲಿ 48 ಕಾರ್ಮಿಕರನ್ನು ರಕ್ಷಿಸಲಾಗಿದೆ.
ದೋಮಲಪೆಂಟಾ ಬಳಿಯ ಶ್ರೀಶೈಲಂ ಅಣೆಕಟ್ಟಿನ ಹಿಂಭಾಗದ ಸುರಂಗದಲ್ಲಿ ಸೋರಿಕೆ ಉಂಟಾಗಿದ್ದು, ಸೋರಿಕೆ ಸರಿಪಡಿಸಲು ಕಾರ್ಮಿಕರು ಒಳಗೆ ಹೋದಾಗ ಛಾವಣಿ ಕುಸಿದಿದೆ. ಕನಿಷ್ಠ 8 ಮಂದಿ ಸುರಂಗದಲ್ಲಿ ಸಿಲುಕಿರುವ ಶಂಕೆಯಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಸುರಂಗ ನಿರ್ಮಾಣ ಕಂಪನಿ ನೀಡಿದ ಮಾಹಿತಿಯ ಪ್ರಕಾರ, ಸುರಂಗದಲ್ಲಿ 12-13 ಕಿಮೀ ಒಳಗೆ ಸೋರಿಕೆ ಉಂಟಾಗಿತ್ತು. ಅದನ್ನು ಸರಿಪಡಿಸಲು ಕಾರ್ಮಿಕರು ಒಳಗೆ ಹೋದಾಗ ಎಡಭಾಗದಲ್ಲಿರುವ ಸುರಂಗದ ಮೇಲ್ಛಾವಣಿ ಮೂರು ಮೀಟರ್‌ಗಳಷ್ಟು ಕುಸಿದಿದೆ ಎಂದು ತಿಳಿದುಬಂದಿದೆ. ಘಟನೆ ಕುರಿತು ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಆಘಾತ ವ್ಯಕ್ತಪಡಿಸಿದ್ದಾರೆ.