ಹಾಸನ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಜಲಪಾತಕ್ಕೆ ಬಿದ್ದಿದ್ದು ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಶಿರಾಡಿಘಾಟ್ ರಸ್ತೆಯಲ್ಲಿ ಸಂಭವಿಸಿದೆ.
ಬೆಂಗಳೂರು ಮೂಲದ ಪ್ರವಾಸಿಗರು ಪ್ರಯಾಣಿಸುತ್ತಿದ್ದ ವೇಳೆ ಜಲಪಾತ ವೀಕ್ಷಣೆಗೆ ಕಾರು ನಿಲ್ಲಿಸುವಾಗ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ ಪಕ್ಕದ ಫಾಲ್ಸ್‌ಗೆ ಕಾರು ಉರುಳಿ ಬಿದ್ದಿದೆ. ಘಟನೆಯಲ್ಲಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮಲೆನಾಡು ಭಾಗದಲ್ಲಿ ಭಾರಿ ಮಳೆಯಿಂದ ಕಿರು ಜಲಪಾತಗಳು ತುಂಬಿ ಹರಿಯುತ್ತಿದ್ದು, ಸಂಭವನೀಯ ಅನಾಹುತ ತಪ್ಪಿದಂತಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
				
															
                    
                    
                    
                    
































