ಬಿರುಬಿಸಿಲಿನ ನಡುವೆ ರಾಜ್ಯಕ್ಕೆ ಭಾರಿ ಮಳೆ ಮುನ್ಸೂಚನೆ ಸಿಕ್ಕಿದ್ದು, ಮುಂದಿನ ಮೂರು ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಹವಾಮಾನ ಇಲಾಖೆ ಉತ್ತರ ಮತ್ತು ದಕ್ಷಿಣ ಒಳನಾಡಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ರಾಜ್ಯದಾದ್ಯಂತ ಮಾರ್ಚ್ 25 ರವರೆಗೆ ಮೋಡ ಕವಿದ ವಾತಾವರಣದೊಂದಿಗೆ, ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗಲಿದೆ. ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ತುಂತುರು ಮಳೆಯಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಾ. 23ರಂದು ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಉಡುಪಿ ರಾಮನಗರ, ಚಿಕ್ಕಮಗಳೂರು, ಕೊಡಗು, ಹಾಸನ, ಚಿತ್ರದುರ್ಗ, ಚಾಮರಾಜನಗರ, ಮೈಸೂರು, ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಹಗುರ ಮಳೆಗೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಒಂದೆರಡು ಸ್ಥಳಗಳಲ್ಲಿ ಗಂಟೆಗೆ 40-50 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ ತಿಳಿಸಿದೆ.
				
															
                    
                    
                    
                    































