ನವದೆಹಲಿ : ಐಎಸ್‌ಐ ಬೆಂಬಲಿತ ಗಡಿಯಾಚೆಗಿನ ಭಯೋತ್ಪಾದನೆಯ ವಿರುದ್ಧ ಮಂಗಳವಾರ ಕಾರ್ಯಾಚರಣೆ ನಡೆಸಿದ ಪಂಜಾಬ್ ಪೊಲೀಸರು ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಸ್ಫೋಟಕಗಳನ್ನು ವಶಪಡಿಸಿಕೊಂಡಿದ್ದಾರೆ.
ಎಸ್‌ಬಿಎಸ್ ನಗರದ ಟಿಬ್ಬಾ ನಂಗಲ್-ಕುಲಾರ್ ರಸ್ತೆಯ ಬಳಿಯ ಅರಣ್ಯ ಪ್ರದೇಶದಲ್ಲಿ ಪಂಜಾಬ್ ಪೊಲೀಸರು ಮತ್ತು ಕೇಂದ್ರ ತನಿಖಾ ದಳದ ಸಿಬ್ಬಂದಿ ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಎರಡು ರಾಕೆಟ್ ಚಾಲಿತ ಗ್ರೆನೇಡ್ (ಆರ್‌ಪಿಜಿ), ಎರಡು ಸುಧಾರಿತ ಸ್ಫೋಟಕ ಸಾಧನಗಳು (ಐಇಡಿ), ಐದು ಪಿ-86 ಹ್ಯಾಂಡ್ ಗ್ರೆನೇಡ್‌ಗಳು, ಒಂದು ಮೊಬೈಲ್ ಅನ್ನು ಜಪ್ತಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಸೇರಿದಂತೆ ಭಯೋತ್ಪಾದಕ ಸಂಘಟನೆಗಳು ಪಂಜಾಬ್‌ನಲ್ಲಿ ಸೀಪರ್ ಸೆಲ್‌ಗಳನ್ನು ಪುನರುಜ್ಜಿವನಗೊಳಿಸಲು ಪ್ರಯತ್ನಿಸುತ್ತಿರುವುದಾಗಿ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಪಂಜಾಬ್ ಡಿಜಿಪಿ ಹೇಳಿದ್ದಾರೆ.