ಹಾಸನ : ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಶುಕ್ರವಾರ ನಡೆದ ಟ್ರಕ್ ದುರಂತಕ್ಕೆ ಸಂಬಂಧಿಸಿದಂತೆ ಸಾವನ್ನಪ್ಪಿದವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.
ಹಾಸನ ತಾಲೂಕಿನ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಗಣೇಶ ಮೆರವಣಿಗೆ ಹೋಗುತ್ತಿದ್ದವರ ಮೇಲೆ ಏಕಾಏಕಿ ಟ್ರಕ್ ಹರಿದು ಈ ಅವಘಡ ಸಂಭವಿಸಿದೆ. ಈ ದುರಂತದಲ್ಲಿ 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೊಸಳೆಹೊಸಳ್ಳಿ ಗ್ರಾಮಸ್ಥರು ಗ್ರಾಮದಲ್ಲಿ 25 ವರ್ಷಗಳಿಂದ ಗ್ರಾಮಸ್ತರು ಗಣಪತಿ ಕೂರಿಸುತ್ತಿದ್ದಾರೆ. ಈ ಹಿನ್ನೆಲೆ ಶುಕ್ರವಾರ ಆರ್ಕೆಸ್ಟ್ರಾ ಆಯೋಜಿಸಲಾಗಿತ್ತು. ಮೆರವಣಿಗೆಯಲ್ಲಿ ಆರ್ಕೆಸ್ಟ್ರಾ ಬಳಿಗೆ ಸಾವಿರಾರು ಮಂದಿ ಬರುತ್ತಿದ್ದರು. ಈ ವೇಳೆ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಟ್ರಕ್ ಹರಿದು ಈ ಅವಘಡ ನಡೆದಿದೆ.
ಮೆರವಣಿಗೆಯಲ್ಲಿ ಭಾಗಿಯಾಗಿದ್ದ ಐವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸೇರಿ ಈವರೆಗೆ ಸಾವಿನ ಸಂಖ್ಯೆ 9ಕ್ಕೆ ಏರಿಕೆಯಾಗಿದ್ದು, ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ. 20 ಮಂದಿ ಗಾಯಾಳುಗಳ ಪೈಕಿ ಮೂವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 7 ಮಂದಿ ಗಾಯಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಾಸನದಿಂದ ಹೊಳೆನರಸೀಪುರದ ಕಡೆಗೆ ಮಹಾರಾಷ್ಟ್ರಕ್ಕೆ ಸೇರಿದ ಟ್ರಕ್ ಹೋಗುತ್ತಿತ್ತು. ಈ ವೇಳೆ ಬೈಕ್‌ಗೆ ಡಿಕ್ಕಿ ತಪ್ಪಿಸಲು ಹೋಗಿ ಮೆರವಣಿಗೆ ಹೋಗುತ್ತಿದ್ದವರ ಮೇಲೆ ಟ್ರಕ್ ಹರಿದಿದೆ. ಪರಿಣಾಮ ಬೈಕ್ ಚಾಲಕ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಟ್ರಕ್ ಚಾಲಕನಿಗೆ ಸ್ಥಳೀಯರು ಹಿಡಿದು ಥಳಿಸಿದ್ದು, ಹಾಸನದ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.