ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ ಬಗ್ಗೆ ಕೇಂದ್ರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇದು ಆಡಳಿತವಲ್ಲ, ಇದು ಸಂಘಟಿತ ಲೂಟಿ. ಚುನಾವಣೆಯ ಸಮಯದಲ್ಲಿ ಜನರನ್ನು ದಾರಿ ತಪ್ಪಿಸುವುದು ಮತ್ತು ನಂತರ ಅವರ ಮೇಲೆ ಹೊರೆ ಹಾಕುವುದು ಪ್ರಧಾನಿ ನರೇಂದ್ರ ಮೋದಿ ಮಾದರಿ ಎಂದು ಸಿಎಂ ವಾಗ್ದಾಳಿ ಮಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ನಾವು ಮೊದಲೇ ಎಚ್ಚರಿಸಿದಂತೆ, ಚುನಾವಣೆಗಳು ಮುಗಿಯುತ್ತಿದ್ದಂತೆಯೇ ಪ್ರಧಾನಿ ನರೇಂದ್ರ ಮೋದಿ ಸರ್ಕಾರವು ಮತ್ತೊಮ್ಮೆ ಬೆಲೆಯನ್ನು ಏರಿಕೆ ಮಾಡಿದೆ.
ಚುನಾವಣೆಗಳ ಅವಧಿಯಲ್ಲಿ ದರ ಏರಿಕೆಯನ್ನು ಉದ್ದೇಶಪೂರ್ವಕವಾಗಿ ತಡೆಹಿಡಿದಿದ್ದ ಸರ್ಕಾರ, ಮೇ 1 ರಂದು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು 993 ರೂ ರಷ್ಟು ಹೆಚ್ಚಿಸಿದೆ. ಇದರಿಂದ ಈಗ ಒಂದು ಸಿಲಿಂಡರ್ ಬೆಲೆ 3,071.50 ರೂ.ಕ್ಕೆ ತಲುಪಿದೆ ಎಂದರು.
ದೇಶಾದ್ಯಂತ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆಯಾಗಿದ್ದು, ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ಚುನಾವಣೆಯ ನಂತರ ಉದ್ದೇಶಪೂರ್ವಕವಾಗಿ ಬೆಲೆ ಹೆಚ್ಚಿಸಲಾಗಿದೆ ಎಂದು ಆರೋಪಿಸಿದ್ದಾರೆ. ಈ ಬೆಲೆ ಏರಿಕೆ ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳ ಮೇಲೆ ಭಾರಿ ಪರಿಣಾಮ ಬೀರಲಿದೆ ಎಂದಿದ್ದಾರೆ.
































