ದೆಹಲಿ: ಗಣರಾಜ್ಯೋತ್ಸವ-2026ರ ಪರೇಡ್ನಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಅವಕಾಶವಿಲ್ಲ. ರಾಜ್ಯ ಸರ್ಕಾರ ‘ಸಿರಿಧಾನ್ಯದಿಂದ ಮೈಕ್ರೋಚಿಪ್ ತನಕ ಎಂಬ ಹೆಸರಿನ ಸ್ತಬ್ಧಚಿತ್ರವನ್ನು ತಯಾರು ಮಾಡಿತ್ತು. ಆದರೆ ಇದಕ್ಕೆ ಅವಕಾಶ ನಿರಾಕರಿಸಲಾಗಿದೆ.
ಭಾನುವಾರ ಮೈಸೂರಿನಲ್ಲಿ ಈ ಕುರಿತು ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ಗಣರಾಜ್ಯೋತ್ಸವದ ಪರೇಡ್ನಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಪತ್ರ ವ್ಯವಹಾರವೆಲ್ಲಾ ಆಗಿದ್ದರೂ, ಕೇಂದ್ರ ಸರ್ಕಾರ ಆಯ್ಕೆ ಮಾಡಿಲ್ಲ ಎನ್ನುವುದು ದುರದೃಷ್ಟಕರ ಎಂದು ಹೇಳಿದರು.
ಈ ಪಯಣವನ್ನು ಸಂಕೇತಿಸುವಂತೆ ‘ಸಿರಿಧಾನ್ಯದಿಂದ ಮೈಕ್ರೋಚಿಪ್’ ವರೆಗೆ (ಮಿಲ್ಲೆಟ್ ಟು ಮೈಕ್ರೋಚಿಪ್) ಎನ್ನುವ ಸ್ತಬ್ಧಚಿತ್ರವನ್ನು 2026ರ ಜನವರಿ 26ರಂದು ನವದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದ ಪರೇಡ್ಗೆ ಸಿದ್ಧಗೊಳಿಸಲಾಗಿತ್ತು.
ಕರ್ನಾಟಕ ರಾಜ್ಯದ ಪರವಾಗಿ ಗಣರಾಜ್ಯೋತ್ಸವದ ಪಥಸಂಚಲನ ಮತ್ತು ಭಾರತ ಪರ್ವದಲ್ಲಿ ಪಾಲ್ಗೊಳ್ಳುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರತಿ ವರ್ಷ ತನ್ನ ವೈಶಿಷ್ಟ್ಯಪೂರ್ಣ ಸ್ತಬ್ಧಚಿತ್ರಗಳ ಮೂಲಕವೇ ದೇಶದ ಗಮನ ಸೆಳೆಯುತ್ತಿತ್ತು. ಈ ವರ್ಷವೂ ಸ್ತಬ್ದಚಿತ್ರವನ್ನು ಅಂತಿಮಗೊಳಿಸಲಾಗಿತ್ತು.
“ಈ ಬಾರಿ ಕೃಷಿ, ಶಿಕ್ಷಣ, ವಿಜ್ಞಾನ, ಉನ್ನತ ತಂತ್ರಜ್ಞಾನ ಹಾಗೂ ಮೈಕ್ರೋಚಿಪ್ಗಳ ಉತ್ಪಾದನೆಯಲ್ಲಿ ಸಾಧಿಸಿರುವ ಸಮತೋಲನಯುತ ಪ್ರಗತಿಯನ್ನು ಸ್ತಬ್ಧಚಿತ್ರದಲ್ಲಿ ತೋರಿಸಲಾಗಿದೆ” ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ಎಂ.ನಿಂಬಾಳ್ಕರ್ ಹೇಳಿದ್ದರು.
ಆದರೆ ಕೇಂದ್ರ ಸರ್ಕಾರ ಬೇರೆ ರಾಜ್ಯಗಳಿಗೆ ಅವಕಾಶ ನೀಡಬೇಕು. ಪರೇಡ್ ಸಮಯ ಕಡಿತ ಸೇರಿದಂತೆ ವಿವಿಧ ಕಾರಣಕ್ಕೆ ಕರ್ನಾಟಕದ ಸ್ತಬ್ಧಚಿತ್ರವನ್ನು ತಿರಸ್ಕಾರ ಮಾಡಿದೆ. ಆದ್ದರಿಂದ ಕಾಂಗ್ರೆಸ್ ಆಡಳಿತ ಇರುವ ಕರ್ನಾಟಕದ ನಾಯಕರು ಆಕ್ರೋಶಗೊಂಡಿದ್ದಾರೆ.
ದೇಶದಲ್ಲಿ ಸಿರಿಧಾನ್ಯಗಳ ಉತ್ಪಾದನೆ ಮತ್ತು ಪೌಷ್ಟಿಕ ಆಹಾರದ ಬಳಕೆಯನ್ನು ಉತ್ತೇಜಿಸುವಲ್ಲಿ ಕರ್ನಾಟಕವು ಪ್ರಮುಖ ರಾಜ್ಯಗಳಲ್ಲಿ ಒಂದಾಗಿದೆ. ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಬೆಂಗಳೂರು ಜಾಗತಿಕವಾಗಿ ಗಮನ ಸೆಳೆದಿದೆ. ಮೈಕ್ರೋಚಿಪ್, ಎಲೆಕ್ಟ್ರಾನಿಕ್ಸ್ ಹಾಗೂ ಸೆಮಿಕಂಡಕ್ಟರ್ ವಲಯಗಳಲ್ಲಿನ ಆವಿಷ್ಕಾರಗಳು ಕರ್ನಾಟಕವನ್ನು ಶ್ರೇಷ್ಠ ತಂತ್ರಜ್ಞಾನ ಕೇಂದ್ರವಾಗಿಸಿದೆ.
ಇವೆಲ್ಲವೂ ಈ ಬಾರಿಯ ಸ್ತಬ್ಧಚಿತ್ರದಲ್ಲಿ ಮೇಳೈಸಿತ್ತು. 2026ರ ಗಣರಾಜ್ಯೋತ್ಸವದ ಸ್ತಬ್ಧಚಿತ್ರಕ್ಕಾಗಿ ಇಲಾಖೆ ಕಿತ್ತೂರು ರಾಣಿ ಚೆನ್ನಮ್ಮ ಮತ್ತು ರಾಣಿ ಅಬ್ಬಕ್ಕದೇವಿ, ಕರ್ನಾಟಕ ಪುಷ್ಪ ವೈಭವ, ಹಲಗಲಿ ಬೇಡರು ಮತ್ತು ಸಿರಿಧಾನ್ಯದಿಂದ ಮೈಕ್ರೋಚಿಪ್ ತನಕ ಎಂಬ 4 ವಿಷಯಗಳನ್ನು ಆಯ್ಕೆ ಮಾಡಿ ಕಳುಹಿಸಿತ್ತು.
ಗಣರಾಜ್ಯೋತ್ಸವದ ಸ್ತಬ್ಧಚಿತ್ರದ ವಿಷಯದ ಆಯ್ಕೆ, ವಿನ್ಯಾಸ, ಕೇಂದ್ರ ಸರ್ಕಾರದ ರಕ್ಷಣಾ ಸಚಿವಾಲಯದಲ್ಲಿ ಅಂತಿಮಗೊಳ್ಳುತ್ತದೆ. ಮೊದಲ ಸಭೆಯಲ್ಲಿಯೇ ಸಿರಿಧಾನ್ಯದಿಂದ ಮೈಕ್ರೋಚಿಪ್ ತನಕ ಎಂಬ ವಿಷಯವನ್ನು ಪರಿಣತರ ಸಮಿತಿಯು ಒಮ್ಮತದಿಂದ ಅಂತಿಮಗೊಳಿಸಿತ್ತು.
ಅದಕ್ಕನುಗುಣವಾಗಿ ಮಣ್ಣಿನಲ್ಲಿ ಸಿರಿಧಾನ್ಯಗಳನ್ನು ಬೆಳೆಸಿದ ದೇಶೀಯ ಜ್ಞಾನದಿಂದ ಮೈಕ್ರೋಚಿಪ್ಗಳನ್ನು ಉತ್ಪಾದಿಸುವ ಸೂಕ್ಷ್ಮತೆಯನ್ನು ಸ್ತಬ್ಧಚಿತ್ರ ಮನಮುಟ್ಟುವಂತೆ ಕಟ್ಟಿಕೊಡುವ ರೀತಿ ತಯಾರಿ ಮಾಡಲಾಗಿತ್ತು.
ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಸ್ತಬ್ಧಚಿತ್ರದೊಂದಿಗೆ ಭಾಗವಹಿಸುವುದು ಪ್ರತಿ ರಾಜ್ಯಕ್ಕೂ ಹೆಮ್ಮೆಯ ಮತ್ತು ಪ್ರತಿಷ್ಠೆಯ ಸಂಕೇತವಾಗಿದೆ. ಹಿಂದೆ ಎಲ್ಲಾ ರಾಜ್ಯಗಳಿಗೂ ಪಥಸಂಚಲನದಲ್ಲಿ ಭಾಗವಹಿಸಲು ಅವಕಾಶವಿತ್ತು.
ಆದರೆ ಈಗ ಭದ್ರತೆ ಮತ್ತು ಗಣರಾಜ್ಯೋತ್ಸವದ ಅವಧಿಯಲ್ಲಿ ಮಾಡಿದ ಇಳಿಕೆ, ಪ್ರಾತಿನಿಧ್ಯತೆಯಿಂದಾಗಿ ಸ್ತಬ್ಧಚಿತ್ರಕ್ಕಾಗಿ ಪ್ರತಿನಿಧಿಸುವ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಸಂಖ್ಯೆಯನ್ನು ರಕ್ಷಣಾ ಸಚಿವಾಲಯವು 2022ನೇ ಸಾಲಿನಿಂದ 15ಕ್ಕೆ ಇಳಿಸಿದೆ.
































