ಬೆಂಗಳೂರು: ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಸೇರಿದ ಚರ ಮತ್ತು ಸ್ಥಿರಾಸ್ತಿಗಳನ್ನು ಸದ್ಯಕ್ಕೆ ಯಾವುದೇ ರೀತಿಯಲ್ಲಿ ಬದಲಾವಣೆ, ಹಸ್ತಾಂತರ ಮಾಡಬಾರದು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಗುರುವಾರ ನಿರ್ದೇಶನ ನೀಡಿದೆ.
ಈ ಮೂಲಕ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಸಂಬಂಧಿಸಿದಂತೆ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಚಾಮುಂಡೇಶ್ವರಿ ಪ್ರಾರ್ಥಿಕಾರ ರಚನೆ ಮಾಡಿರುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಮೈಸೂರು ರಾಜಮನೆತನದ ರಾಣಿ ಪ್ರಮೋದದೇವಿ ಒಡೆಯರ್ ಸಲ್ಲಿಸಿದ ತಕರಾರು ಅರ್ಜಿಯ ವಿಚಾರಣೆ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರಿದ್ದ ಏಕಸದಸ್ಯ ಪೀಠ ನಡೆದಿದೆ.
ಚಾಮುಂಡೇಶ್ವರಿ ಕ್ಷೇತ್ರದ ಮಾಲೀಕತ್ವದ ಬಗ್ಗೆ ಕಳೆದ 20 ವರ್ಷಗಳಿಗೂ ಹಿಂದಿನಿಂದ ಕೋರ್ಟ್ ನಲ್ಲಿ ವ್ಯಾಜ್ಯವಿದೆ. 2004ರಲ್ಲಿ ರಾಜಮನೆತನ ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಅದರ ವಿರುದ್ಧ ಮೇಲ್ಮನವಿ ಸಲ್ಲಿಸಲಾಗಿದ್ದು, ಅದು ವಿಚಾರಣೆ ಹಂತದಲ್ಲಿರುವಾಗಲೇ ವಿಧಾನಮಂಡಲದಲ್ಲಿ ವಿಧೇಯಕ ಮಂಡಿಸಿ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿರುವುದು ನಿಯಮ ಬಾಹಿರವಾಗಿದೆ ಎಂದು ಅರ್ಜಿದಾರರ ಪರ ವಕೀಲರು ವಾದಿಸಿದ್ದಾರೆ.
ಸರ್ಕಾರದ ಪರವಾಗಿ ಹೆಚ್ಚುವರಿ ಅಡ್ವೊಕೇಟ್ ಜನರಲ್ ಎನ್. ದೇವದಾಸ್ ಅವರು ವಾದಿಸಿ, ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚಿಸಲು ಸಂವಿಧಾನದ ಪರಿಚ್ಛೇದ 212 ಅಡಿಯಲ್ಲಿ ರಾಜ್ಯ ಸರ್ಕಾರಕ್ಕೆ ಅಧಿಕಾರ ಇದೆ ಎಂದು ತಿಳಿಸಿದ್ದಾರೆ.
ದೇವಸ್ಥಾನದ ಚರ ಮತ್ತು ಸ್ಥಿರ ಆಸ್ತಿಗಳಲ್ಲಿ ಯಾವುದೇ ಬದಲಾವಣೆ ಮಾಡಬಾರದು, ಹಸ್ತಾಂತರ ಮಾಡಬಾರದು ಎಂದು ಸರ್ಕಾರಕ್ಕೆ ನಿರ್ದೇಶನ ನೀಡಿದ್ದು, ಸೆಪ್ಟಂಬರ್ 25ಕ್ಕೆ ಅರ್ಜಿಯ ವಿಚಾರಣೆ ಮುಂದೂಡಲಾಗಿದೆ.
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.