ಬೆಂಗಳೂರು: ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ರಾಜ್ಯ ಸರ್ಕಾರವೇ ಕಾನೂನು ಹಾಳುಗೆಡವಿದೆ. ಆದ್ದರಿಂದ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ತರಬೇಕೆಂದು ರಾಜ್ಯಪಾಲರಿಗೆ ಮನವಿ ಮಾಡುತ್ತೇನೆ ಎಂದು ವಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ.
ರಾಜ್ಯ ಸರ್ಕಾರದ ವಿರುದ್ಧ ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗ ಬಿಜೆಪಿ-ಜೆಡಿಎಸ್ನಿಂದ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಉಪಮುಖ್ಯಮಂತ್ರಿಯೂ ಆಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಕಾಪಾಡಬೇಕು. ಆದರೆ ಅವರು ಕಲ್ಲು ಹೊಡೆಯಿರಿ, ಟಯರ್ ಸುಡಿ ಎಂದು ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ ಎಂದರು.
ಬಿಜೆಪಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದೆ. ಈ ಸರ್ಕಾರವೇ ಕಾನೂನು ಸುವ್ಯವಸ್ಥೆಯನ್ನು ಹಾಳು ಮಾಡುತ್ತಿದೆ. ಕಾಂಗ್ರೆಸ್ ನಾಯಕರು, ತಮ್ಮವರು ಪ್ರತಿಭಟನೆ ಮಾಡುತ್ತಾರೆ, ನೀವು ಸಹಕಾರ ನೀಡಿ ಎಂದು ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಪೊಲೀಸರ ಕೈ ಕಟ್ಟಿ ಹಾಕಿ ಕಾನೂನು ಸುವ್ಯವಸ್ಥೆ ಹಾಳುಗೆಡವಿದ್ದಾರೆ. ಆದ್ದರಿಂದ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ತರಬೇಕು ಎಂದರು.
ಬಿ.ಎಸ್.ಯಡಿಯೂರಪ್ಪ, ಎಲ್.ಕೆ.ಅಡ್ವಾಣಿ, ರಾಮಕೃಷ್ಣ ಹೆಗಡೆ ಅವರ ಮೇಲೆ ಆರೋಪ ಬಂದಾಗ ರಾಜೀನಾಮೆ ಪಡೆಯಲಾಗಿತ್ತು. ಸಚಿವ ಬಿ.ನಾಗೇಂದ್ರ ಅವರ ತಪ್ಪು ಇಲ್ಲವಾದರೆ ರಾಜೀನಾಮೆ ಕೊಟ್ಟಿದ್ದು ಏಕೆ? ದಲಿತರಾದರೆ ರಾಜೀನಾಮೆ ಕೊಡಬೇಕು. ಆದರೆ ಸಿದ್ದರಾಮಯ್ಯ ಮಾತ್ರ ರಾಜೀನಾಮೆ ಕೊಡಬಾರದು ಎಂದರೆ ಹೇಗೆ? 5 ಲಕ್ಷ ರೂ.ಗೆ ಜಮೀನು ಪಡೆದು 62 ಕೋಟಿ ರೂ. ಕೇಳುವ ಯೋಜನೆ ರಾಜ್ಯದಲ್ಲಿದ್ದರೆ ಎಲ್ಲರಿಗೂ ತಿಳಿಸಲಿ. ಇಂತಹ ಲೂಟಿಕೋರರಿಗೆ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು.