ಲಂಡನ್ : ಜಮ್ಮು & ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದಂತಹ ಭಯೋತ್ಪಾದಕ ದಾಳಿಗೆ ಬ್ರಿಟಿಷ್ ಸಂಸದ ಬಾಬ್ ಬ್ಲಾಕ್‌ಮನ್ ಖಂಡನೆ ವ್ಯಕ್ತಪಡಿಸಿದ್ದಾರೆ. ಪಾಕ್ ವಿರುದ್ಧ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿದ ಭಾರತಕ್ಕೆ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ.
ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (POK) ಕಾರ್ಯನಿರ್ವಹಿಸುತ್ತಿರುವ ಭಯೋತ್ಪಾದಕ ಶಿಬಿರಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಯುನೈಟೆಡ್ ಕಿಂಗ್‌ಡಂನ ಪ್ರಧಾನಿ ಕೈರ್ ಸ್ಟಾರ್ಮರ್ ಸರ್ಕಾರಕ್ಕೆ ಬ್ಲಾಕ್‌ಮನ್ ಒತ್ತಾಯಿಸಿದ್ದಾರೆ.
ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯ ನಂತರ, ಭಾರತವು ಆಪರೇಷನ್ ಸಿಂಧೂರ್ ಅನ್ನು ಪ್ರಾರಂಭಿಸಿತು, ಇದರಲ್ಲಿ ಒಂಬತ್ತು ಭಯೋತ್ಪಾದಕ ಅಡಗುತಾಣಗಳ ಮೇಲೆ ನಿಖರವಾದ ವಾಯುದಾಳಿಗಳನ್ನು ನಡೆಸಲಾಯಿತು. ಶಾಂತಿ ಮಾತುಕತೆಗಳು ನಡೆಯುತ್ತಿರುವಾಗ, ಪಾಕಿಸ್ತಾನ ಆಕ್ರಮಿತ ಕಾಶ್ಮೀರದಿಂದ ಭಯೋತ್ಪಾದಕ ಅಡಗುತಾಣಗಳನ್ನು ತೆಗೆದುಹಾಕಲು ವಿದೇಶಾಂಗ ಕಾರ್ಯದರ್ಶಿ ಯಾವ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ನಾನು ಕೇಳಿದೆ” ಎಂದು ಅವರು ಹೌಸ್ ಆಫ್ ಕಾಮನ್ಸ್‌ನಲ್ಲಿ ಹೇಳಿದರು. ಬ್ಲ್ಯಾಕ್‌ಮನ್ ತಮ್ಮ ಭಾಷಣದ ವೀಡಿಯೊವನ್ನು ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ.
ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಯುಕೆ ವಿದೇಶಾಂಗ ಕಾರ್ಯದರ್ಶಿ (ವಿದೇಶಾಂಗ ಸಚಿವ) ಡೇವಿಡ್ ಲ್ಯಾಮಿ, ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು “ಭಯಾನಕ” ಎಂದು ಬಣ್ಣಿಸಿದರು ಮತ್ತು ಭಯೋತ್ಪಾದನೆಯನ್ನು ಎದುರಿಸಲು ಬ್ರಿಟಿಷ್ ಸರ್ಕಾರ ಭಾರತ ಮತ್ತು ಪಾಕಿಸ್ತಾನ ಎರಡರೊಂದಿಗೂ ಕೆಲಸ ಮಾಡುತ್ತಿದೆ ಎಂದು ಭರವಸೆ ನೀಡಿದರು.
ಪಹಲ್ಗಾಮ್‌ನಲ್ಲಿ 26 ಪ್ರವಾಸಿಗರನ್ನು ಉಗ್ರರು ಗುಂಡಿಕ್ಕಿ ಹತ್ಯೆಗೈದ ದಿನವೇ ಕೃತ್ಯವನ್ನು ಬ್ಲಾಕ್‌ಮನ್ ಖಂಡಿಸಿದ್ದರು. ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ನಿರ್ಮೂಲನೆಗೆ ಭಾರತ ಕೈಗೊಂಡ ಕ್ರಮವನ್ನು ಸಂಪೂರ್ಣವಾಗಿ ಬೆಂಬಲಿಸುವಂತೆ ತಮ್ಮ ಸರ್ಕಾರವನ್ನು ಒತ್ತಾಯಿಸಿದ್ದರು.