ಶಿಕಾರಿಪುರ : ‘ರಾಜ್ಯದ ಗೃಹ ಸಚಿವರು ಮಡಿಕೇರಿಯ ಬಿಜೆಪಿ ಯುವ ಕಾರ್ಯಕರ್ತ ವಿನಯ್ ಸೋಮಯ್ಯ ಅವರ ಆತ್ಮಹತ್ಯೆ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ, ಇದರ ಹಿಂದೆ ಶಾಸಕರಿದ್ದಾರಾ, ಮತ್ತೊಬ್ಬರಿದ್ದಾರಾ ಎಂಬುದರ ಕುರಿತು ಪರಿಶೀಲಿಸಿ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ.
ಶಿಕಾರಿಪುರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಎಷ್ಟೇ ದೊಡ್ಡ ವ್ಯಕ್ತಿಗಳಿದ್ದರೂ ಕೂಡ ವಿನಯ್ ಸೋಮಯ್ಯ ಅವರ ಸಾವಿಗೆ ನ್ಯಾಯ ಕೊಡಬೇಕು ಎಂದು ಒತ್ತಾಯಿಸಿದರು. ಇಲ್ಲವಾದರೆ ಬಿಜೆಪಿ ಇದರ ವಿರುದ್ಧ ಉಗ್ರ ಹೋರಾಟ ನಡೆಸಲಿದೆ ಎಂದು ಎಚ್ಚರಿಸಿದರು.
‘ಮಡಿಕೇರಿಯ ಬಿಜೆಪಿ ಯುವ ಕಾರ್ಯಕರ್ತ ವಿನಯ್ ಸೋಮಯ್ಯ ಅವರು ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಲ್ಲಿನ ಶಾಸಕರು ಮತ್ತು ಕಾಂಗ್ರೆಸ್ ಕಾರ್ಯಕರ್ತರ ಕಿರುಕುಳದಿಂದಲೇ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್ ನೋಟ್ ಕೂಡ ಬರೆದು ಆತ್ಮಹತ್ಯೆಗೆ ಶರಣಾದುದು ದುರ್ದೈವ ಮತ್ತು ಬಹಳ ನೋವಿನ ಸಂಗತಿ’ ಎಂದು ತಿಳಿಸಿದರು.
‘ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದ ಬಳಿಕ ಬಿಜೆಪಿ ಕಾರ್ಯಕರ್ತರ ಮೇಲೆ ನಿರಂತರವಾಗಿ ದಬ್ಬಾಳಿಕೆ ನಡೆಯುತ್ತಿದೆ. ಸಾಕಷ್ಟು ಕಾರ್ಯಕರ್ತರ ಮೇಲೆ ಎಫ್‍ಐಆರ್ ಹಾಕುತ್ತಿದ್ದಾರೆ. ಅವರಿಗೆ ಕಿರುಕುಳ, ತೊಂದರೆ ಕೊಡುವುದು ನಿರಂತರವಾಗಿ ನಡೆಯುತ್ತಿದೆ’ ಎಂದು ಆಕ್ಷೇಪಿಸಿದರು.
‘ವಿನಯ್ ಸೋಮಯ್ಯ ಅವರು ಇದೇರೀತಿಯ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಕೇಳಿಬರುತ್ತಿದೆ. ಬಿಜೆಪಿ ಕಾರ್ಯಕರ್ತ ಎಂಬ ದೃಷ್ಟಿಯ ಬದಲಾಗಿ ಮಾನವೀಯತೆ ದೃಷ್ಟಿಯಿಂದ ಗೃಹ ಸಚಿವರು ಇದನ್ನು ನೋಡಬೇಕಿದೆ’ ಎಂದು ತಿಳಿಸಿದರು. ‘ಕಾಂಗ್ರೆಸ್ ಸರಕಾರದ ಆಡಳಿತಾವಧಿಯಲ್ಲಿ ಜನಸಾಮಾನ್ಯರು ಮತ್ತು ಬಿಜೆಪಿ ಕಾರ್ಯಕರ್ತರು ತೊಂದರೆ ಅನುಭವಿಸುತ್ತಿದ್ದಾರೆ ಎಂಬುದಕ್ಕೆ ಇದು ಮತ್ತೊಂದು ಉದಾಹರಣೆ’ ಎಂದು ತಿಳಿಸಿದರು.