ನವದೆಹಲಿ : ಜಂಟಿ ಸಂಸದೀಯ ಸಮಿತಿ ಪರಿಶೀಲನೆಗೆ ಒಳಪಟ್ಟಿರುವ ವಕ್ಫ್ ತಿದ್ದುಪಡಿ ಮಸೂದೆಯನ್ನು ಕೇಂದ್ರ ಸರ್ಕಾರವು ಏ. 2ರಂದು ಲೋಕಸಭೆಯಲ್ಲಿ ಮಂಡಿಸಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಕುರಿತಾದ ಚರ್ಚೆಗೆ 8 ಗಂಟೆಗಳ ಸಮಯ ಮೀಸಲಿಡಲಾಗಿದೆ. ಜತೆಗೆ, ಬುಧವಾರವೇ ಲೋಕಸಭೆಯಲ್ಲಿ ಮಸೂದೆಯನ್ನು ಅಂಗೀಕರಿಸಿ ಮರುದಿನ ರಾಜ್ಯಸಭೆಯಲ್ಲಿ ಮಂಡಿಸಲು ಸರ್ಕಾರ ತಯಾರಿ ನಡೆಸಿದೆ.
ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅಧ್ಯಕ್ಷತೆಯಲ್ಲಿ ನಡೆದ ಬಿಎಸಿ ಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆಯ ಚರ್ಚೆಗೆ 12 ಗಂಟೆಗಳ ಕಾಲಾವಕಾಶ ಕೋರಲಾಗಿದೆ. ಜೊತೆಗೆ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಕುರಿತು ಚರ್ಚೆ ಮತ್ತು ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳ ಕುರಿತು ವಿವರವಾದ ಚರ್ಚೆಗಳನ್ನು ನಡೆಸಲು ವಿರೋಧ ಪಕ್ಷಗಳು ಒತ್ತಾಯಿಸಿವೆ ಎನ್ನಲಾಗಿದೆ.
ಸಂಸತ್ತಿನ ಬಜೆಟ್ ಅಧಿವೇಶನವು ಏ.4ರಂದು ಅಂತ್ಯವಾಗಲಿದೆ. ವಕ್ಫ್ ತಿದ್ದುಪಡಿ ಮಸೂದೆ ಕಾಯ್ದೆಯಾಗಲು ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕೃತಗೊಳ್ಳಬೇಕು. ಆದ್ದರಿಂದ, ಲೋಕಸಭೆಯಲ್ಲಿ ಮಸೂದೆ ಅಂಗೀಕಾರವಾದರೂ, ಸಮಯದ ಕೊರತೆಯಿಂದಾಗಿ ರಾಜ್ಯಸಭೆಯಲ್ಲಿ ಮಸೂದೆಗೆ ಅನುಮೋದನೆ ದೊರೆಯುವ ಸಾಧ್ಯತೆಯಿಲ್ಲ ಎಂದು ಹೇಳಲಾಗಿದೆ.