ನವದೆಹಲಿ : ಜನರ ಆದೇಶವನ್ನು ನಾವು ಅತ್ಯಂತ ನಮ್ರತೆಯಿಂದ ಸ್ವೀಕರಿಸುತ್ತೇವೆ ಎಂದು ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.
ದೆಹಲಿ ಚುನಾವಣೆಯಲ್ಲಿ ಸೋತ ಬಳಿಕ ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ವಿಡಿಯೊ ಸಂದೇಶ ಹಂಚಿಕೊಂಡಿರುವ ಅವರು, ಈ ಗೆಲುವಿಗಾಗಿ ನಾನು ಬಿಜೆಪಿಯನ್ನು ಅಭಿನಂದಿಸುತ್ತೇನೆ. ಚುನಾವಣೆಯಲ್ಲಿ ಅವರು ನೀಡಿದ ಎಲ್ಲಾ ಭರವಸೆಗಳನ್ನು ಈಡೇರಿಸುತ್ತಾರೆ ಎಂದು ನಾನು ಭಾವಿಸುತ್ತೇನೆ. ನಮ್ಮ ಪಕ್ಷವು ಜನರ ಸೇವೆಯಲ್ಲಿ ಮುಂದುವರಿಯಲಿದ್ದು, ವಿರೋಧ ಪಕ್ಷದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಲಿದ್ದೇವೆ ಎಂದು ಹೇಳಿದರು.
ಕಳೆದ 10 ವರ್ಷಗಳಲ್ಲಿ ನಾವು ಆರೋಗ್ಯ, ಶಿಕ್ಷಣ, ಮೂಲಸೌಕರ್ಯ ಕ್ಷೇತ್ರದಲ್ಲಿ ಸಾಕಷ್ಟು ಕೆಲಸ ಮಾಡಿದ್ದೇವೆ. ನಾವು ರಚನಾತ್ಮಕ ವಿರೋಧ ಪಕ್ಷವಾಗಿ ಕೆಲಸ ಮಾಡುವುದರ ಜೊತೆಗೆ ಜನರ ನಡುವೆಯೇ ಇದ್ದು ಅವರಿಗೆ ಸೇವೆ ಸಲ್ಲಿಸುವುದನ್ನು ಮುಂದುವರಿಸುತ್ತೇವೆ ಎಂದರು.
ಅಧಿಕಾರಕ್ಕಾಗಿ ನಾವು ರಾಜಕಾರಣಕ್ಕೆ ಬಂದಿಲ್ಲ. ಜನರ ಸೇವೆಗಾಗಿ ರಾಜಕಾರಣವನ್ನು ಆಯ್ಕೆ ಮಾಡಿಕೊಂಡಿದ್ದೇವೆ. ಹಾಗಾಗಿ ಸಮಾಜ ಸೇವೆ, ಜನರ ಕಷ್ಟಗಳಲ್ಲಿ ನೆರವಾಗುವುದನ್ನು ಮುಂದುವರಿಸಲಿದ್ದೇವೆ ಎಂದು ಭರವಸೆ ನೀಡಿದರು.