ಬೆಳಗಾವಿ : ಸುವರ್ಣ ವಿಧಾನಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಅಧಿವೇಶನಕ್ಕೆ ಬೆಳಗಾವಿ ಸಜ್ಜಾಗಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನಗರದಲ್ಲಿ ಹೆಚ್ಚುವರಿ ಭದ್ರತೆ ನಿಯೋಜಿಸಲಾಗಿದೆ.
ಡಿಸೆಂಬರ್ 19 ವರೆಗೆ 10 ದಿನಗಳ ಕಾಲ ಚಳಿಗಾಲದ ಅಧಿವೇಶನ ನಡೆಯಲಿದೆ. ಈ ಅಧಿವೇಶನದಲ್ಲಿ 21ಕ್ಕೂ ಹೆಚ್ಚು ವಿಧೇಯಕಗಳ ಮಂಡನೆ ಸಾಧ್ಯತೆ ಇದೆ. ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿರೋಧ ಪಕ್ಷಗಳು ಸಜ್ಜಾಗಿವೆ. ವಿಪಕ್ಷಗಳ ಅಸ್ತ್ರಗಳನ್ನು ಎದುರಿಸಲು ಸರ್ಕಾರ ಕೂಡ ತಯಾರಾಗಿದೆ.
ಅಧಿವೇಶನದ ಮೊದಲ ದಿನದ ಕಲಾಪ ಸಂತಾಪ ಸೂಚನೆಗೆ ಮಾತ್ರ ಸೀಮಿತವಾಗಲಿದೆ. ಸಂತಾಪದ ಬಳಿಕ ಕಲಾಪವನ್ನು ಮುಂದೂಡಲು ಸ್ಪೀಕರ್ ತೀರ್ಮಾನಿಸಿದ್ದಾರೆ. ಬಿಜೆಪಿ-ಜೆಡಿಎಸ್ ಪಕ್ಷಗಳು ಈಗಾಗಲೇ ಈಗ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ರೆಡಿಯಾಗಿವೆ. ಈ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳೇ ಪ್ರಮುಖ ಅಸ್ತ್ರವಾಗಲಿವೆ. ಕಳೆದ ಬೆಳಗಾವಿ ಅಧಿವೇಶನದಲ್ಲಿ ನೀಡಿದ್ದ ಭರವಸೆಗಳ ಅನುಷ್ಠಾನದ ಸ್ಥಿತಿಗತಿ ಕುರಿತು ಸರ್ಕಾರದಿಂದ ಮಾಹಿತಿ ಕೋರಲಿವೆ ಎಂದು ಹೇಳಲಾಗಿದೆ.
ಕಾಂಗ್ರೆಸ್ ಶಾಸಕರಲ್ಲೇ ಮುಂದುವರಿದ ಬಣಗಾರಿಕೆ, ದಿಲ್ಲಿ ಯಾತ್ರೆ, ನಾಯಕತ್ವ ಬದಲಾವಣೆ ಚರ್ಚೆ, ಬ್ರೇಕ್‌ಫಾಸ್ಟ್-ಲಂಚ್-ಡಿನ್ನರ್ ಸಭೆಗಳ ಪ್ರಸ್ತಾಪ, ಇವೆಲ್ಲವನ್ನು ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಪಕ್ಷಗಳು ಅಸ್ತ್ರವಾಗಿ ಬಳಸಲಿದೆ.

































