ಬೆಂಗಳೂರು : ರಾಜ್ಯದ ಜನರ ಆರ್ಥಿಕ ಶಕ್ತಿ ಹೆಚ್ಚಿಸಲು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಿ, ಪ್ರಾದೇಶಿಕ ಅಸಮತೋಲನ, ಅಸಮಾನತೆ ತೊಡೆಯಲು ನಿಮ್ಮ ಸಹಕಾರ ಹೆಚ್ಚು ಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು IAS-IPS ಅಧಿಕಾರಿಗಳಿಗೆ ಕರೆ ನೀಡಿದರು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಹಿರಿಯ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳಿಗೆ ಹೊಸವರ್ಷದ ಶುಭಾಶಯಗಳನ್ನು ಕೋರಿ ಮಾತನಾಡಿದರು. ಬದುಕಿನಲ್ಲಿ ಏಳು ಬೀಳು ಸಹಜ ಮತ್ತು ನಿರಂತರ. ಪರಿಸ್ಥಿತಿಗಳು ಸದಾ ನಮ್ಮ ಪರವಾಗಿ ಇರುವುದಿಲ್ಲ. ಆದರೆ ಆತ್ಮವಿಶ್ವಾಸ ಕಳೆದುಕೊಳ್ಳದೆ ಧೈರ್ಯದಿಂದ ಸಮಸ್ಯೆಗಳನ್ನು, ಸಂದರ್ಭಗಳನ್ನು ನಿರ್ವಹಿಸಿ ಪರಿಹಾರ ಕಂಡುಕೊಳ್ಳಲು ಸಾಧ್ಯವಿದೆ.
ಆಡಳಿತಾಂಗದಲ್ಲಿ IAS-IPS-IRS-IFS ಅಧಿಕಾರಿಗಳ ಜವಾಬ್ದಾರಿ ಹೆಚ್ಚು. ನಾವು ಕಾನೂನುಗಳನ್ನು ರಚಿಸಿ, ಜಾರಿ ಆಗುವ ದಿಕ್ಕಿನಲ್ಲಿ ನಿರಂತರ ನಿಗಾ ವಹಿಸುತ್ತೇವೆ. ಅಧಿಕಾರಿ ವರ್ಗ ಸಮಾಜಕ್ಕೆ ಪೂರಕವಾಗಿ ಕ್ರಿಯಾಶೀಲತೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದರು.
ಸಂವಿಧಾನ ಜಾರಿ ಸಂದರ್ಭದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಆಡಿದ ಮಾತುಗಳನ್ನು ಉಲ್ಲೇಖಿಸಿದ ಸಿಎಂ, ಸಮಾಜದ ಎಲ್ಲಾ ವರ್ಗಗಳಿಗೆ ಸಾಮಾಜಿಕ-ಆರ್ಥಿಕ ಸ್ವಾತಂತ್ರ್ಯ ಒದಗಿಸಬೇಕು. ಇಲ್ಲದಿದ್ದರೆ ರಾಜಕೀಯ ಸ್ವಾತಂತ್ರ್ಯಕ್ಕೆ ಅರ್ಥ ಬರುವುದಿಲ್ಲ ಎಂದರು.
ಭಾರತದ ಆರ್ಥಿಕತೆ ಕುಸಿತ ಕಂಡಿದ್ದಾಗ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಮನಮೋಹನ್ ಸಿಂಗ್ ಅವರು ದೇಶದ ಆರ್ಥಿಕತೆಗೆ ಹೊಸ ಚೈತನ್ಯ ನೀಡಿದರು. ದೇಶದ ಆರ್ಥಿಕ ಬೆಳವಣಿಗೆ ಆಗಿ ಇದರ ಲಾಭ ದೇಶದ ಜನರಿಗೆ ಲಭಿಸುವಂತೆ ಮಾಡಿದರು. ಸಂವಿಧಾನದ ನಿರ್ದೇಶಕ ತತ್ವಗಳಾದ ಸಮಾನತೆ, ಜಾತ್ಯತೀತತೆ, ಸಾಮಾಜಿಕ ನ್ಯಾಯದ ಮೌಲ್ಯಗಳನ್ನು ದೇಶದ ಜನರ ಮೂಲಭೂತ ಹಕ್ಕುಗಳನ್ನಾಗಿ ಮಾಡಿದರು. ಮಾಹಿತಿ ಹಕ್ಕು, ಆಹಾರದ ಹಕ್ಕು, ಶಿಕ್ಷಣದ ಹಕ್ಕುಗಳನ್ನು ಕಡ್ಡಾಯ ಮಾಡಿದರು. ಆ ಮೂಲಕ ಸಮಾನತೆಯೆಡೆಗೆ ದೇಶವನ್ನು ಮುನ್ನಡೆಸಿದರು ಎಂದು ವಿವರಿಸಿದರು.