ಕೋಯಿಕ್ಕೋಡ್: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ವಯನಾಡ್ ಕ್ಷೇತ್ರದಿಂದಲೇ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂದು ಕಾಂಗ್ರೆಸ್ ಸಂಸದ ಕೆ. ಮುರಳೀಧರನ್ ತಿಳಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಈಗಿನ ವ್ಯವಸ್ಥೆಯನ್ನು ನಾನು ಒಪ್ಪುತ್ತೇನೆ. ರಾಹುಲ್ ಗಾಂಧಿ ವಯನಾಡ್ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಅದರಲ್ಲಿ ಯಾವುದೇ ರೀತಿಯ ಬದಲಾವಣೆ ಇರುವುದಿಲ್ಲ. ಕಣ್ಣೂರು ಕ್ಷೇತ್ರವನ್ನು ಹೊರತುಪಡಿಸಿ ಕೇರಳ ರಾಜ್ಯದ ಎಲ್ಲಾ ಹಾಲಿ ಸಂಸದರು ಅದೇ ಸ್ಥಾನಗಳಿಗೆ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.
ಇನ್ನು 2019ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅವರು ವಯನಾಡ್ ಕ್ಷೇತ್ರದಿಂದ ಸ್ಪರ್ಧಿಸಿ ಆಯ್ಕೆಯಾಗಿರುತ್ತಾರೆ. ಈ ಬಾರಿ ರಾಹುಲ್ ಗಾಂಧಿ ವಯನಾಡ್ ಕ್ಷೇತ್ರದಿಂದ ಸ್ಪರ್ಧಿಸುತ್ತಾರೋ ಇಲ್ಲವೋ ಎಂದು ಕಾದು ನೋಡಬೇಕಿದೆ.


































