ಬಿಷ್ಕೆಕ್: ಕಿರ್ಗಿಸ್ತಾನ್ನಲ್ಲಿರುವ ಭಾರತ, ಪಾಕ್ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗುತ್ತಿದೆ. ಹೀಗಾಗಿ ಅಲ್ಲಿರುವ ಭಾರತೀಯ ನಾಗರಿಕರಿಗೆ ಮನೆಯೊಳಗೆ ಇರುವಂತೆ ಭಾರತ ಒತ್ತಾಯ ಮಾಡಿದೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಭಾರತೀಯ ರಾಯಭಾರ ಕಚೇರಿ, ‘ನಾವು ನಮ್ಮ ವಿದ್ಯಾರ್ಥಿಗಳೊಂದಿಗೆ ಸಂಪರ್ಕದಲ್ಲಿದ್ದೇವೆ. ಪ್ರಸ್ತುತ ಪರಿಸ್ಥಿತಿ ಶಾಂತವಾಗಿದೆ. ಆದರೆ ವಿದ್ಯಾರ್ಥಿಗಳು ಸದ್ಯಕ್ಕೆ ಮನೆಯೊಳಗೆ ಇರಲು ಮತ್ತುಯಾವುದೇ ಸಮಸ್ಯೆಯ ಸಂದರ್ಭದಲ್ಲಿ ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿರಲು ಸಲಹೆ ನೀಡಲಾಗಿದೆ. ಸಹಾಯವಾಣಿ ಸಂಖ್ಯೆ 0555710041 ಸಂಪರ್ಕಿಸಬಹುದು’ ಎಂದು ತಿಳಿಸಿದೆ.
ಬಿಷ್ಕೆಕ್ನಲ್ಲಿ ಭಾರತೀಯ ವಿದ್ಯಾರ್ಥಿಗಳ ಯೋಗಕ್ಷೇಮವನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ. ಈಗ ಪರಿಸ್ಥಿತಿ ಶಾಂತವಾಗಿದೆ ಎಂದು ವರದಿಯಾಗಿದೆ. ಈಗಾಗಲೇ ಹಲವಾರು ಪಾಕಿಸ್ತಾನಿ ವಿದ್ಯಾರ್ಥಿಗಳು ತಮ್ಮ ಹಾಸ್ಟೆಲ್ನಲ್ಲಿ ಗುಂಪು ಹಿಂಸಾಚಾರದಲ್ಲಿ ಗಾಯಗೊಂಡಿದ್ದಾರೆ. ಹೀಗಾಗಿ ಭಾರತೀಯ ವಿದ್ಯಾರ್ಥಿಗಳು ನಿಯಮಿತವಾಗಿ ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿರುವಂತೆ ವಿದೇಶಾಂಗ ಸಚಿವ ಎಸ್.ಜೈಶಂಕರ್ ಸೂಚನೆ ನೀಡಿದ್ದಾರೆ.
ಭಾರತ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ವಿದ್ಯಾರ್ಥಿಗಳು ವಾಸಿಸುವಂತಹ ಬಿಷ್ಕೆಕ್ನಲ್ಲಿರುವ ವೈದ್ಯಕೀಯ ವಿಶ್ವವಿದ್ಯಾಲಯಗಳ ಹಾಸ್ಟೆಲ್ಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗುತ್ತಿದೆ. ಈ ದಾಳಿಯಲ್ಲಿ ಮೂವರು ಪಾಕಿಸ್ತಾನಿ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಆದರೆ ಈ ಬಗ್ಗೆ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ ಎಂದು ಸರ್ಕಾರ ತಿಳಿಸಿದೆ. ಇನ್ನು ಈ ದಾಳಿಯಲ್ಲಿ ಯಾವುದೇ ಭಾರತೀಯ ವಿದ್ಯಾರ್ಥಿಗಳು ಗಾಯಗೊಂಡಿಲ್ಲ ಎಂದು ತಿಳಿದುಬಂದಿದೆ.