ಬೆಂಗಳೂರು: ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೂನ್ 1ರಂದು ವಿಚಾರಣೆಗೆ ಖುದ್ದು ಹಾಜರಾಗುವಂತೆ ಎಸ್‌ಐಟಿ ತಂಡ, ಭವಾನಿ ರೇವಣ್ಣ ಅವರಿಗೆ ಮತ್ತೊಂದು ನೋಟಿಸ್ ಜಾರಿಗೊಳಿಸಿದೆ.
ಈ ಮುಂಚೆ ನೀಡಿದ್ದ ನೋಟಿಸ್‌ಗೆ ಪ್ರತಿಕ್ರಿಯಿಸಿದ್ದ ನೀವು, ತನಿಖೆಗೆ ಅವಶ್ಯವಿದ್ದರೆ ಹೊಳೆನರಸೀಪುರದ ಚೆನ್ನಾಂಬಿಕಾ ನಿವಾಸದಲ್ಲಿ ಇರುವುದಾಗಿ ತಿಳಿಸಿದ್ದೀರಿ. ಆದರೆ, ಈ ಹಿಂದೆ ನೀಡಿದ್ದ ನೋಟೀಸ್‌ಗೆ ನೀವು ಉತ್ತರ ನೀಡಿರಲಿಲ್ಲ. ಈ ಕೇಸ್‌ನಲ್ಲಿ ನಿಮ್ಮನ್ನು ವಿಚಾರಣೆಗೆ ಒಳಪಡಿಸುವ ಅಗತ್ಯವಿದೆ ಎಂದು ನೋಟಿಸ್‌ನಲ್ಲಿ ಹೇಳಲಾಗಿದೆ.
ಜೊತೆಗ ಮಹಿಳಾ ಅಧಿಕಾರಿಗಳೊಂದಿಗೆ ಜೂನ್ 1 ರಂದು ಬೆಳಿಗ್ಗೆ 10ರಿಂದ ಸಂಜೆ 5 ಗಂಟೆ ಒಳಗೆ ವಿಚಾರಣೆಗೆ ಬರುತ್ತೇವೆ. ಆ ವೇಳೆ ಮನೆಯಲ್ಲಿ ಖುದ್ದು ಹಾಜರಿರಬೇಕು ಎಂದು ಎಸ್‌ಐಟಿ ಇನ್‌ಸ್ಪೆಕ್ಟರ್ ಹೇಮಂತ್ ಕುಮಾರ್ ನೋಟಿಸ್‌ನಲ್ಲಿ ಸೂಚನೆ ನೀಡಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಭವಾನಿ ರೇವಣ್ಣ ಜಾಮೀನು ಅರ್ಜಿ ಸಲ್ಲಿಸಿದ್ದರು. ಇಂದು ವಿಚಾರಣೆ ನಡೆಯಲಿದೆ. ಈ ಮಧ್ಯೆ ಎಸ್‌ಐಟಿ ಖುದ್ದು ಹಾಜರಿರುವಂತೆ ನೋಟಿಸ್ ನೀಡಿದ್ದು, ನಿರೀಕ್ಷಣಾ ಜಾಮೀನು ಸಿಗದಿದ್ದರೆ ಭವಾನಿ ರೇವಣ್ಣ ಅವರು ಬಂಧನವಾಗುವ ಸಾಧ್ಯತೆ ಇದೆ.