ಬೆಂಗಳೂರು : ಮೈಸೂರು ದಸರಾ-2024 ಮತ್ತು ದಸರಾ ರಜೆಗಳ ಪ್ರಯುಕ್ತ ಅಕ್ಟೋಬರ್ 9ರಿಂದ 12ರವರೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಬೆಂಗಳೂರಿನಿಂದ ರಾಜ್ಯ ಮತ್ತು ಅಂತರ್ರಾಜ್ಯದ ವಿವಿಧ ಸ್ಥಳಗಳಿಗೆ 2,000ಕ್ಕೂ ಹೆಚ್ಚು ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಿದೆ.
ರಾಜ್ಯ ಹಾಗೂ ದೇಶದ ವಿವಿಧೆಡೆಗಳಿಂದ ದಸರಾ ವೀಕ್ಷಣೆಗೆ ಮೈಸೂರು ನಗರಕ್ಕೆ ಬರುವ ಪ್ರವಾಸಿಗರು ಹಾಗೂ ರಜೆಗಳ ಪ್ರಯುಕ್ತ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ನಿಗಮ, ಪ್ರಸ್ತುತ ಕಾರ್ಯಾಚರಿಸುತ್ತಿರುವ ವೇಗದೂತ, ರಾಜಹಂಸ, ಸ್ಲೀಪರ್, ಐರಾವತ, ಐರಾವತ ಕ್ಲಬ್ ಕ್ಲಾಸ್ (ಮಲ್ಟಿ ಆಕ್ಸಲ್) ಹಾಗೂ ಅಂಬಾರಿ ಕ್ಲಬ್ ಕ್ಲಾಸ್, ಪಲ್ಲಕ್ಕಿ ಸ್ಲೀಪರ್, ಅಶ್ವಮೇಧ ಸಾರಿಗೆ ಸೇವೆಗಳ ಜೊತೆಗೆ ಹೆಚ್ಚುವರಿ ಬಸ್ ಸೌಲಭ್ಯ ಒದಗಿಸಲು ಸಾರಿಗೆ ಇಲಾಖೆ ಕ್ರಮ ಕೈಗೊಂಡಿದೆ. ಅದರಂತೆ ಅ. 9ರಿಂದ ಅ.12ರವರೆಗೆ ಬೆಂಗಳೂರಿನಿಂದ ರಾಜ್ಯ ಮತ್ತು ಅಂತರ್ರಾಜ್ಯದ ವಿವಿಧ ಸ್ಥಳಗಳಿಗೆ 2,000ಕ್ಕೂ ಹೆಚ್ಚು ವಿಶೇಷ ಕೆಎಸ್ಆರ್ಟಿಸಿ ಬಸ್ ವ್ಯವಸ್ಥೆ ಮಾಡಲಾಗಿದೆ.
ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶೃಂಗೇರಿ, ಹೊರನಾಡು, ಶಿವಮೊಗ್ಗ, ಮಡಿಕೇರಿ, ಮಂಗಳೂರು, ದಾವಣಗೆರೆ, ಗೋಕರ್ಣ, ಕೊಲ್ಲೂರು, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಕಾರವಾರ, ಬಳ್ಳಾರಿ, ಹೊಸಪೇಟೆ, ಕಲಬುರಗಿ, ರಾಯಚೂರು ಮುಂತಾದ ಸ್ಥಳಗಳಿಗೆ ಹಾಗೂ ನೆರೆರಾಜ್ಯಗಳಲ್ಲಿನ ಹೈದರಾಬಾದ್, ಚೆನ್ನೈ, ಊಟಿ, ಕೊಡೈಕೆನಾಲ್, ಸೇಲಂ, ತಿರುಚಿನಾಪಳ್ಳಿ, ಪುದುಕೋಟೆ, ಮಧುರೈ, ಪಣಜಿ, ಶಿರಡಿ, ಪೂನಾ, ಏರ್ನಾಕುಲಂ, ಪಾಲ್ಗಾಟ್ ಹಾಗೂ ಇತರೆ ಸ್ಥಳಗಳಿಗೆ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ.
ಇನ್ನು ಮೈಸೂರು ದಸರಾಗೆ ತೆರಳುವವರಿಗೆ ಕೂಡ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಬೆಂಗಳೂರಿನ ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರಿಗೆ ಪ್ರತ್ಯೇಕವಾಗಿ 260 ಹೆಚ್ಚುವರಿ ಬಸ್ಗಳ ವ್ಯವಸ್ಥೆ ಮಾಡಲಾಗಿದೆ.