ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಕೋರ್ಟ್ ಜಾಮೀನು ನೀಡಲು ನಿರಾಕರಿಸಿದೆ. ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಮೊದಲ ಪ್ರಕರಣದಲ್ಲಿ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಪರ ವಕೀಲ ಅರ್ಜಿ ಸಲ್ಲಿಸಿದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರಿದ್ದ ಪೀಠ, ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ. ಈ ಪ್ರಕರಣದಲ್ಲಿ ಮಾಜಿ ಸಂಸದ ಎಸ್ಐಟಿ ಬಂಧನದಲ್ಲಿದ್ದಾರೆ. ಪ್ರಜ್ವಲ್ ರೇವಣ್ಣ ವಿರುದ್ಧ ಮೂರು ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಹೊಳೆನರಸೀಪುರ, ಸಿಐಡಿಯಲ್ಲಿ ಎರಡು ಪ್ರಕರಣ ದಾಖಲಾಗಿತ್ತು. ಮೊದಲ ಪ್ರಕರಣದಲ್ಲಿ ಪ್ರಜ್ವಲ್ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿದೆ. ಹೆಚ್.ಡಿ.ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಇಬ್ಬರೂ ಆರೋಪಿಗಳಾಗಿರುವ ಪ್ರಕರಣವಿದು. ಈಗಾಗಲೇ ಹೆಚ್.ಡಿ.ರೇವಣ್ಣ ಜಾಮೀನು ಪಡೆದುಕೊಂಡಿದ್ದಾರೆ. ಮೊದಲು ಲೈಂಗಿಕ ದೌರ್ಜನ್ಯ ಆರೋಪದಡಿ ಪ್ರಕರಣ ದಾಖಲಾಗಿತ್ತು. ನಂತರ ಅತ್ಯಾಚಾರ ಆರೋಪವನ್ನು ಪ್ರಕರಣದಲ್ಲಿ ಸೇರಿಸಲಾಗಿತ್ತು.
