ಬೆಂಗಳೂರು: ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ವರ್ಗಾವಣೆಗೆ ಅಧಿಸೂಚನೆ ಪ್ರಕಟವಾಗಿದೆ. 2024 -25 ನೇ ಸಾಲಿನ ವರ್ಗಾವಣೆಗೆ ಅಧಿಸೂಚನೆ ಪ್ರಕಟಿಸಿದ್ದು, ವರ್ಗಾವಣೆ ಬಯಸುವ ಶಿಕ್ಷಕರು ಶಾಲಾ ಶಿಕ್ಷಣ ಇಲಾಖೆಯ ವೆಬ್ಸೈಟ್ ಮೂಲಕ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಕೌನ್ಸೆಲಿಂಗ್ ದಿನಾಂಕವನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು. ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದ ಅಧಿಕಾರಿಗಳು(ಸಕ್ಷಮ ಪ್ರಾಧಿಕಾರ) ಮಾರ್ಚ್ 18ರಿಂದ ಶಾಲೆಗಳ ವಲಯ ನಮೂದಿಸುವುದು ಸೇರಿದಂತೆ ಅಗತ್ಯ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಶಿಕ್ಷಣ ಇಲಾಖೆಯ ಆಯುಕ್ತರಾದ ಬಿ.ಬಿ. ಕಾವೇರಿ ಸೂಚನೆ ನೀಡಿದ್ದಾರೆ.
ಹಳೆ ನಿಯಮದ ಅನ್ವಯವೇ ಶಿಕ್ಷಕರ ವರ್ಗಾವಣೆ ಕೈಗೊಳ್ಳಲು ಶಿಕ್ಷಣ ಇಲಾಖೆ ತೀರ್ಮಾನಿಸಿದೆ. ನೂತನ ಶಿಕ್ಷಕರ ವರ್ಗಾವಣೆ ಕಾಯ್ದೆ ಜಾರಿಗೊಳಿಸಿ ವರ್ಗಾವಣೆ ಪ್ರಕ್ರಿಯೆ ಕೈಗೊಳ್ಳಲು ಶಿಕ್ಷಣ ಇಲಾಖೆ ಪ್ರಯತ್ನಿಸಿತ್ತು. ಸಮಯದ ಅಭಾವದ ಕಾರಣ ಹಳೆ ನಿಯಮದ ಮಾದರಿಯಲ್ಲಿ ವರ್ಗಾವಣೆ ನಡೆಸಲಿದ್ದು, ಶಿಕ್ಷಕರಿಗೆ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ. ಲೋಕಸಭೆ ಚುನಾವಣೆ ನೀತಿ ಸಂಹಿತೆ ಜಾರಿಗೆ ಬರುವ ಹಿನ್ನೆಲೆಯಲ್ಲಿ ಸದ್ಯಕ್ಕೆ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಿ ನಂತರ ಕೌನ್ಸೆಲಿಂಗ್ ಗೆ ದಿನಾಂಕ ನಿಗದಿಪಡಿಸಲಾಗುವುದು ಎನ್ನಲಾಗಿದೆ.


































